ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ ಎಸ್‌ಐಟಿಗೆ

| Published : Apr 28 2024, 01:24 AM IST / Updated: Apr 28 2024, 04:48 AM IST

Prajwal revanna
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌ ಎಸ್‌ಐಟಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ   ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.

 ಬೆಂಗಳೂರು :  ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಹಾಸನ ಜೆಡಿಎಸ್‌ ಸಂಸದ ಹಾಗೂ ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಎಸ್‌ಐಟಿ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ ಬಿಜಯ್ ಕುಮಾರ್ ಸಿಂಗ್‌ ಅವರಿಗೆ ಈ ಲೈಂಗಿಕ ಹಗರಣದ ತನಿಖೆ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿದೆ. ಈ ತಂಡದಲ್ಲಿ ಇಬ್ಬರು ಎಸ್ಪಿಗಳು ಹಾಗೂ ಐವರು ಡಿವೈಎಸ್ಪಿಗಳು ಸೇರಿದಂತೆ ಇತರೆ ಅಧಿಕಾರಿಗಳ ನಿಯೋಜನೆಗೆ ಸರ್ಕಾರ ನಿರ್ಧರಿಸಿದೆ. ಇನ್ನು ಎಸ್‌ಐಟಿಗೆ ಅಧಿಕಾರಿಗಳ ಆಯ್ಕೆ ಜವಾಬ್ದಾರಿಯನ್ನು ಎಡಿಜಿಪಿ ಬಿ.ಕೆ.ಸಿಂಗ್ ಅವರಿಗೆ ಸರ್ಕಾರ ನೀಡಿದೆ.

ಮೊದಲ ಹಂತದ ಲೋಕಸಭಾ ಚುನಾವಣಾ ಸಮರದ ಅಂತಿಮ ಹಂತದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ಶೋಷಣೆ ಆರೋಪ ಕೇಳಿಬಂದಿತ್ತು. ಹಲವು ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಸಂಸದರ ಮೇಲೆ ಆರೋಪ ಬಂದಿತ್ತು. ಜೊತೆಗೆ, ಮಹಿಳೆಯರ ಜತೆ ಸಂಸದರು ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋಗಳ ‘ಪೆನ್‌ ಡ್ರೈವ್‌’ ಸ್ಫೋಟಗೊಂಡಿತ್ತು. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಸಂಸದರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರವಾಗಿ ರಾಜ್ಯ ಮಹಿಳಾ ಆಯೋಗಕ್ಕೆ ಮಹಿಳಾ ಸಂಘಟನೆಗಳು ದೂರು ನೀಡಿದ್ದವು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯೋಗವು, ಲೈಂಗಿಕ ಹಗರಣದ ಕುರಿತು ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿತು. ಆಯೋಗದ ಶಿಫಾರಸಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈಗ ಎಡಿಜಿಪಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದರು.

ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಎಸ್‌ಐಟಿ ರಚನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಆದೇಶ ಹೊರಬೀಳಲಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ:ಈ ನಡುವೆ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿರುವುದಾಗಿ ಮುಖ್ಯಮಂತ್ರಿಗಳು ಕಚೇರಿ ಮೂಲಗಳು ತಿಳಿಸಿವೆ.