ಮಹಿಳಾ ಸಶಕ್ತಿಕರಣಕ್ಕೆ ಬಿಜೆಪಿ ಒತ್ತು

| Published : Apr 25 2024, 01:01 AM IST

ಸಾರಾಂಶ

ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಬಿಜೆಪಿ ಅಧಿಕಾರ ಸಿಕ್ಕಾಗ ಹಲವಾರು ಮಹಿಳಾ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಬಿಜೆಪಿ ಅಧಿಕಾರ ಸಿಕ್ಕಾಗ ಹಲವಾರು ಮಹಿಳಾ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ‌ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಹೇಳಿದರು.ನಗರದ ಬಿಜೆಪಿ‌ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಿಳಾ‌ ಮೋರ್ಚಾದ ಜಿಲ್ಲಾ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಶೇ.33ರಷ್ಟು ಮಹಿಳಾ ಮೀಸಲಾತಿ, ತ್ರಿವಳಿ ತಲಾಖ್ ರದ್ದು, ಮಹಿಳಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಸೇರಿ ಮಹಿಳಾ ರಕ್ಷಣೆಗೆ ಅನೇಕ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಉಜ್ವಲ ಯೋಜನೆಯಡಿ 35.57 ಲಕ್ಷ ಗ್ಯಾಸ್ ಸಂಪರ್ಕ, ಜಲ ಜೀವನ್‍ನಡಿ ಕರ್ನಾಟಕದಲ್ಲಿ 70.12 ಲಕ್ಷ ಮನೆಗಳಿಗೆ ನಲ್ಲಿಗಳ ಸಂಪರ್ಕ, ಕರ್ನಾಟಕದಲ್ಲಿ 48 ಲಕ್ಷಕ್ಕಿಂತ ಹೆಚ್ಚು ಶೌಚಾಲಯಗಳ ನಿರ್ಮಾಣ ಹೀಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಮಾಹಿತಿ ನೀಡಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಕಳೆದ 10 ವರ್ಷಗಳಲ್ಲಿ 51.6 ಕೋಟಿ ಜನಧನ ಖಾತೆಗಳನ್ನು ತೆರೆಯಲಾಗಿದ್ದು, ಇದರಲ್ಲಿ 28 ಕೋಟಿ ಮಹಿಳಾ ಖಾತೆಗಳಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಶೇ.70ರಷ್ಟು ಮನೆಗಳನ್ನು ಮಹಿಳೆಯರಿಗೆ ಕೊಡಲಾಗುತ್ತಿದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಗೆಲ್ಲಲು ಮಹಿಳೆಯರ ಪಾತ್ರ ದೊಡ್ಡದಿದೆ. ಎಲ್ಲರೂ ಬಿಜೆಪಿಯ ಸಾಧನೆಗಳನ್ನು ಪ್ರತಿ ಮನೆಮನೆಗೆ ತಲುಪಿಸಿ‌ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ‌ ಅವರ ಗೆಲುವಿಗೆ ಶ್ರಮಿಸೋಣ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್‌ ಕುಚಬಾಳ ಮಾತನಾಡಿ, ದೇಶದ ಎಲ್ಲಾ ರಂಗಗಳಲ್ಲಿ‌ ಮುಂಚೂಣಿಯಲ್ಲಿರುವ ಮಹಿಳೆಯರಿಗೆ ಕಾಂಗ್ರೆಸ್ ಹಾಗೂ ಪ್ರಾದೇಶಿಕ‌ ಪಕ್ಷಗಳಲ್ಲಿ ಆದ್ಯತೆ ಸಿಗುತ್ತಿಲ್ಲ. ಇಂದಿರಾಗಾಂಧಿ ಪ್ರಧಾನಿ ಇದ್ದಾಗಲೂ ಮಹಿಳೆಯರಿಗೆ ಆದ್ಯತೆ ಕೊಡಲಿಲ್ಲ. ಆದರೆ ಬಿಜೆಪಿಯಲ್ಲಿ ಸುಷ್ಮಾ ಸ್ವರಾಜ್ ಅವರನ್ನು ವಿದೇಶಾಂಗ ಸಚಿವೆಯನ್ನಾಗಿ ಮಾಡಿತು.‌ ಅವರು ಆ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಇಂದು ನಿರ್ಮಲಾ ಸೀತಾರಾಮನ್ ಅವರನ್ನು ವಿತ್ತ ಸಚಿವೆಯನ್ನಾಗಿ ಮಾಡಿತು. ಅವರು ಕೋವಿಡ್‌ನಂತಹ ಸಂಕಷ್ಟ ಸ್ಥಿತಿಯಲ್ಲಿ ಸಮರ್ಪಕ ಆರ್ಥಿಕ ನಿರ್ವಹಣೆ ಮಾಡಿದರು.‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರು ರಾಜಕೀಯವಾಗಿ ಮೇಲೆ‌ ಬರಲು ಶೇ.33 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಮಹಿಳೆಯರು ಎಲ್ಲಾ ರಂಗಗಳಲ್ಲೂ ಮುಂದೆ ಬರಬೇಕೆಂಬ ವಿಚಾರ ಬಿಜೆಪಿ ಪಕ್ಷದ್ದಾಗಿದೆ ಎಂದರು.

ಬಿಜೆಪಿ ಬೆಳಗಾವಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾತನಾಡಿದರು. ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ್, ಈರಣ್ಣ ರಾವೂರ, ಸಾಬೂ ಮಾಶ್ಯಾಳ ಹಾಗೂ ಹಲವರು ಉಪಸ್ಥಿತರಿದ್ದರು.