ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ

| Published : Apr 20 2024, 01:34 AM IST / Updated: Apr 21 2024, 09:44 AM IST

Neha-Hiremath-Murder-Fayaz-Karnataka
ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.

 ಬೆಂಗಳೂರು :  ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ. ‘ಇದೊಂದು ಲವ್‌ ಜಿಹಾದ್‌ ಪ್ರಕರಣ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಸಮಾಜಘಾತುಕ ಶಕ್ತಿಗಳು ರಾಜಾರೋಷವಾಗಿ ಓಡಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವು ಬಿಜೆಪಿ ಮುಖಂಡರು ಆರೋಪಿಸಿದರೆ, ಕಾಂಗ್ರೆಸ್ ಈ ಆರೋಪಗಳನ್ನು ತಳ್ಳಿಹಾಕಿದೆ.

ಬಿಜೆಪಿಗರ ಆರೋಪಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿ‍ವಕುಮಾರ್‌ ಮತ್ತು ಗೃಹ ಸಚಿವ ಪರಮೇಶ್ವರ್‌ ಅವರು, ಇದು ವೈಯಕ್ತಿಕ ಕಾರಣಗಳಿಂದ ಆದ ಹತ್ಯೆ. ಬಿಜೆಪಿಯವರು ವಿನಾಕಾರಣ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ ಎಂದಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.43ರಷ್ಟು ಹೆಚ್ಚಾಗಿವೆ. ಕರ್ನಾಟಕ ಬಿಹಾರ ಆಗುತ್ತಿದೆ. ಪ್ರಕರಣವನ್ನು ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅದೇ ರೀತಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ನಡೆದ ಹಲವು ಘಟನೆಗಳು ಇದನ್ನು ಪುಷ್ಟೀಕರಿಸುತ್ತವೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಆರೋಪಿಸಿದ್ದಾರೆ. ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ಕರ್ನಾಟಕ ಜಿಹಾದಿಗಳ ರಾಜ್ಯವಾಗಿದೆ. ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಭಯೋತ್ಪಾದನಾ ದುಷ್ಕೃತ್ಯಗಳು ಕಾಂಗ್ರೆಸ್ಸಿನವರನ್ನೂ ಬಿಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಬೇರೆ ಯಾವುದೋ ರಾಜ್ಯದಲ್ಲಿ ಹೆಣ್ಣು ಮಕ್ಕಳನ್ನು ಹತ್ತಾರು ಬಾರಿ ಚುಚ್ಚಿ ಕೊಲ್ಲುವುದನ್ನು ಕೇಳಿದ್ದೆವು. ಆದರೆ, ಈಚಿನ ದಿನಗಳಲ್ಲಿ ಇದೇ ರೀತಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಘಾತ ವ್ಯಕ್ತಪಡಿಸಿದರೆ, ಇದೊಂದು ನಾಗರಿಕ ಸಮಾಜ ತಲೆತಗ್ಗಿಸುವ ಪ್ರಕರಣ, ರಾಜ್ಯದಲ್ಲಿ ಅಶಾಂತಿ ಇದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಪ್ರಕರಣದ ತನಿಖೆಯನ್ನು ಲವ್‌ ಜಿಹಾದ್‌ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು. ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ಈ ಹತ್ಯೆ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರೆ, ಮುಖ್ಯಮಂತ್ರಿಗಳು, ಗೃಹ ಸಚಿವರ ಮನೆಯಲ್ಲಿ ಈ ರೀತಿಯ ಘಟನೆಯಾಗಿದ್ದರೆ ಸುಮ್ಮನೆ ಕೂರುತ್ತಿದ್ದೀರಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ತಿರುಗೇಟು:

ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಹುಬ್ಬಳ್ಳಿ ಕೊಲೆ ಪ್ರಕರಣದ ಸಂಬಂಧ ಬಿಜೆಪಿಯವರು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲ ಸರ್ಕಾರಗಳ ಅವಧಿಯಲ್ಲೂ ವೈಯಕ್ತಿಕ ಕಾರಣಗಳಿಗೆ ಕೆಲ ಪ್ರಕರಣಗಳು ಆಗುತ್ತವೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶದ ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ, ‘ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಈ ವಿಚಾರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್‌ ಎಂದರು.

ಇನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕೂಡ ಕಾನೂನು ಸುವ್ಯವಸ್ಥೆಯನ್ನು ಸಮರ್ಥಿಸಿಕೊಂಡಿದ್ದು, ನೇಹಾ ಹತ್ಯೆ ಪ್ರಕರಣವನ್ನು ಲವ್‌ಜಿಹಾದ್‌ ಆಯಾಮದಲ್ಲಿ ತನಿಖೆ ನಡೆಸಬೇಕೆಂಬ ಬಿಜೆಪಿಗರ ಆಗ್ರಹವನ್ನು ತಳ್ಳಿಹಾಕಿದ್ದಾರೆ. ಪ್ರಕರಣದ ಹಿಂದೆ ಲವ್ ಜಿಹಾದ್ ಇಲ್ಲ. ನೇಹಾ ಮತ್ತು ಆರೋಪಿ ಫಯಾಜ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ದೂರ ಆಗಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ವಿನಾಕಾರಣ ಈ ವಿಚಾರದಲ್ಲಿ ಸರ್ಕಾರವನ್ನು ದೂರುತ್ತಿದ್ದಾರೆ ಎಂದು ಹೇಳಿದರು.