ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

| Published : May 09 2024, 12:45 AM IST

ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.

ಕನ್ನಡಪ್ರಭ ವಾರ್ತೆ ಮೈಸೂರು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಜಾಗೊಳಿಸಬೇಕು ಮತ್ತು ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಬುಧವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಆದ್ದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.

ನಗರದ ಮೈಮುಲ್ ಮುಂಭಾಗ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್ ಅವರ ನೇತೃತ್ವದಲ್ಲಿ ಶಾಸಕರಾದ ಜಿ.ಡಿ. ಹರೀಶ್ಗೌಡ, ಸಿ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಕೆ. ಮಹದೇವ್, ಎಂ. ಅಶ್ವಿನ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡು. ಘೋಷಣೆ ಕೂಗುತ್ತ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದರು.

ಹಾಸನ ಜಿಲ್ಲಾದ್ಯಾಂತ ಮಹಿಳೆಯ ಅಶ್ಲೀಲ ಚಿತ್ರಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚುವ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ ಎಂದು ಅವರು ಆರೋಪಿಸಿದರು.

ಈ ಅಶೀಲ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಾದಾದ್ಯಂತ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರೂ ಆದ ವಕೀಲ ದೇವರಾಜೇಗೌಡ ಬಯಲು ಮಾಡಿದ್ದು, ಈ ಇಬ್ಬರು ನಾಯಕರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ಪಡಿಸಿದರು.

ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಪ್ರಕರಣದಲ್ಲಿ ತಪ್ಪು ಮಾಡಿದ್ದಾನೆ ಎನ್ನುವವರು ಎಷ್ಟು ಅಪರಾಧಿಯೋ, ಅದನ್ನು ಹಂಚಿದವರೂ ಅಷ್ಟೇ ಅಪರಾಧಿಗಳು ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದರು.

ವಿಡಿಯೋ ಹಂಚಿದವರ ವಿರುದ್ಧ ಯಾಕಿನ್ನೂ ಕ್ರಮ ಕೈಗೊಂಡಿಲ್ಲ. ಚೆನ್ನೈ ಕಂಪನಿ ಒಂದರಲ್ಲಿ ಕೋಟ್ಯಂತರ ರು. ಖರ್ಚು ಮಾಡಿ ಪೆನ್ ಡ್ರೈವ್ ಖರೀದಿಸಿದ್ದಾರೆ. ಬೇರೆಡೆ ಅದಕ್ಕೆ ವೀಡಿಯೋ ಅಪ್ ಲೋಡ್ ಮಾಡಲಾಗಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತ ಪಿತೂರಿಯಿಂದ ಇಂತಹ ನೀಚ ರಾಜಕಾರಣ ಮಾಡಲಾಗಿದೆ ಎಂದು ಅವರು ಕಿಡಿಕಾರಿದರು.

ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ಚಿತ್ರ ಬಿತ್ತರಿಸುವ ಮೂಲಕ ಮಹಿಳೆಯರ ಮಾನ ಹರಾಜು ಮಾಡಲಾಗಿದೆ. ಎಸ್ಐಟಿ ಯನ್ನು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸರ್ಕಾರ ಎಸ್ ಐಟಿಗೆ ವಹಿಸದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿಯಾದರೂ ಸಿಬಿಐಗೆ ವಹಿಸುವಂತೆ ಮಾಡುತ್ತೇವೆ ಎಂದು ಅವರು ಆಕ್ರೋಶ ಭರಿತರಾಗಿ ಹೇಳಿದರು.

ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಗಿಲ್ಲದೇ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದರು.

ಮಾಜಿ ಸಚಿವ, ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ ಮಾತನಾಡಿ, ವಕೀಲ ದೇವರಾಜೇಗೌಡ ಹೇಳಿರುವಂತೆ ಎಸ್ಐಟಿ ನಡೆಸುತ್ತಿರುವ ತನಿಖಾ ವಿಧಾನ ಗಮನಿಸಿದರೇ, ಈ ವಿಡೀಯೋ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ನೇರವಾದ ಹಸ್ತಕ್ಷೇಪವಿರುವುದು ಎದ್ದು ಕಾಣುತ್ತದೆ. ಈ ಕಾರಣದಿಂದ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳದಿಂದ ನಿಷ್ಪಕ್ಷಪಾತ ತನಿಖೆ ಆಸಾಧ್ಯ ಎಂದರು.

ಜೆಡಿಎಸ್ ನಗರಾಧ್ಯಕ್ಷ ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ, ನಗರಾಧ್ಯಕ್ಷ ಕೆ.ಟಿ. ಚಲುವೇಗೌಡ, ಮಾಜಿ ಮೇಯರ್ಗಳಾದ ಎಂ.ಜೆ. ರವಿಕುಮಾರ್, ಆರ್. ಲಿಂಗಪ್ಪ, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಶ್ರೀಧರ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.