ರೇವಣ್ಣ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್‌ ಬೃಹತ್ ಧರಣಿ

| Published : May 08 2024, 01:02 AM IST

ರೇವಣ್ಣ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್‌ ಬೃಹತ್ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್‌ ಪಕ್ಷದಿಂದ ಹಾಸನ ಜಿಲ್ಲೆಯಾದ್ಯಂತ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನ । ಜಿಲ್ಲಾಧಿಕಾರಿ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ । ನಿಷ್ಪಕ್ಷಪಾತ ತನಿಖೆಗೆ ಒತ್ತಾಯ

ಕನ್ನಡಪ್ರಭ ವಾರ್ತೆ ಹಾಸನ

ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್‌ ಪಕ್ಷದಿಂದ ಜಿಲ್ಲೆಯಾದ್ಯಂತ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಲಾಯಿತು. ಡಿ.ಕೆ. ಶಿವಕುಮಾರ್‌ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಿತು. ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿ ಅಲ್ಲಿಂದ ಕಳುಹಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಡಿ.ಕೆ. ಶಿವಕುಮಾರ್ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ದಹಿಸಿ ಜೆಡಿಎಸ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು.

‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮತ್ತು ಹಣದ ಬಲದಿಂದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದರ ಜತೆಗೆ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನೇ ಮುಂದಿಟ್ಟುಕೊಂಡು ದ್ವೇಷ ರಾಜಕೀಯದ ಮೂಲಕ ಜೆಡಿಎಸ್ ಪಕ್ಷ ಹಾಗೂ ನಾಯಕರನ್ನು ಹಣಿಯುವ ಷಡ್ಯಂತ್ರ ಮಾಡಿರುವುದು ಜಗಜ್ಜಾಹೀರವಾಗಿದೆ’ ಎಂದು ದೂರಿದರು.

‘ಅಧಿಕಾರ ದುರುಪಯೋಗ ಪಡಿಸಿಕೊಂಡಿರುವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಕ್ರಮ ಜರುಗಿಸಬೇಕು. ಅಲ್ಲದೆ ಇವರೊಂದಿಗೆ ಪೆನ್‌ಡ್ರೈವ್ ಹಂಚಿಕೆಯಲ್ಲಿ ಭಾಗಿಯಾಗುವ ಮೂಲಕ ಮಹಿಳೆಯರು, ಹೆಣ್ಣುಮಕ್ಕಳ ಮಾನ ಹರಾಜಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿಸಿಎಂ ಸೇರಿದಂತೆ ಮಾಜಿ ಸಂಸದ, ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರುವ ಜಾಯಮಾನ ಹೊಂದಿರುವ ಎಲ್.ಆರ್. ಶಿವರಾಮೇಗೌಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್, ಕಾರು ಚಾಲಕ ಕಾರ್ತಿಕ್, ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು ಅಲಿಯಾಸ್ ಪುಟ್ಟಿ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಪಡಿಸುತ್ತೇವೆ’ ಎಂದು ಹೇಳಿದರು.

‘ಕೂಡಲೇ ಪ್ರಕರಣವನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ಆದೇಶ ಮಾಡಬೇಕು. ಇಲ್ಲವೇ ಸಿಬಿಐ ತನಿಖೆಗೆ ವಹಿಸಬೇಕು. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ರಾಜಕೀಯವಾಗಿ ಅಣಿಯುವ ಏಕೈಕ ದುರುದ್ದೇಶದಿಂದ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆದ್ದರಿಂದ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್, ಶಾಸಕರಾದ ಸಿ.ಎನ್.ಬಾಲಕೃಷ್ಣ, ಎ.ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಬೇಲೂರು ತಾಲೂಕು ಅಧ್ಯಕ್ಷ ತೋಚ. ಅನಂತ ಸುಬ್ಬರಾಯ, ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಪ್ರತಿಭಟನೆಯಲ್ಲಿ ಭಾಗಿಯಾದರು.

ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜೆಡಿಎಸ್‌ ಕಾರ್ಯಕರ್ತರನ್ನು ಪೊಲೀಸರು ಹೊರಗೆ ಕಳುಹಿಸಿದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಕೈಲಿ ಹಿಡಿದಿದ್ದ ಬ್ಯಾನರ್ ಮತ್ತು ನಾಮಫಲಕವನ್ನು ಎಸೆದು ಘೋಷಣೆ ಕೂಗಿದರು.

ಜೆಡಿಎಸ್ ಹಾಸನ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ಮಾಧ್ಯಮ ವಕ್ತಾರ ಹೊಂಗೆರೆ ರಘು, ಮುಖಂಡರಾದ ಗಿರೀಶ್, ಸಿ.ಆರ್. ಶಂಕರ್, ಸುಮಾ, ಪ್ರೇಮಮ್ಮ, ಬಿದರಿಕೆರೆ ಜಯರಾಂ ಇದ್ದರು.