ಮಲೇರಿಯಾ ನಿರ್ಮೂಲನೆಗೆ ಸ್ವಚ್ಛತೆಗೆ ಆದ್ಯತೆ ನೀಡಿ-ಡಾ. ಸರಿತಾ

| Published : May 10 2024, 01:33 AM IST

ಮಲೇರಿಯಾ ನಿರ್ಮೂಲನೆಗೆ ಸ್ವಚ್ಛತೆಗೆ ಆದ್ಯತೆ ನೀಡಿ-ಡಾ. ಸರಿತಾ
Share this Article
  • FB
  • TW
  • Linkdin
  • Email

ಸಾರಾಂಶ

ಮಲೇರಿಯಾ ನಿರ್ಮೂಲನೆಗೆ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಹಾಗೂ ಸೊಳ್ಳೆ ಪರದೆ ಬಳಸಬೇಕು. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ರೋಗವಾಹಕ ರೋಗಗಳ ನಿಯಂತ್ರಾಧಿಕಾರಿ ಡಾ. ಸರಿತಾ ಹೇಳಿದರು.

ಹಾವೇರಿ: ಮಲೇರಿಯಾ ನಿರ್ಮೂಲನೆಗೆ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಹಾಗೂ ಸೊಳ್ಳೆ ಪರದೆ ಬಳಸಬೇಕು. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ರೋಗವಾಹಕ ರೋಗಗಳ ನಿಯಂತ್ರಾಧಿಕಾರಿ ಡಾ. ಸರಿತಾ ಹೇಳಿದರು. ನಗರದ ಹೊಸಮಠದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಸಹಯೋಗದಲ್ಲಿ ಜರುಗಿದ ವಿಶ್ವ ಮಲೇರಿಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ೨೦೨೫ಕ್ಕೆ ಮಲೇರಿಯಾ ನಿರ್ಮೂಲನೆ ಗುರಿಹಾಕಿಕೊಳ್ಳಲಾಗಿದೆ. ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.ಸಾರ್ವಜನಿಕರು ಜಾಗೃತರಾಗಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು. ತ್ಯಾಜ್ಯವನ್ನು ನೇರವಾಗಿ ಚರಂಡಿಗೆ ಹಾಕದೆ ಕಸದ ವಾಹನಗಳಿಗೆ ಹಾಕಬೇಕು. ರೋಗ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಹಾಗಾಗಿ ಎಲ್ಲರೂ ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಹೇಳಿದರು.ಮಲೇರಿಯಾ ರೋಗ ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಬಾಧಿಸುತ್ತದೆ. ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ, ಮೆದುಳು ಜ್ವರ ಹಾಗೂ ಆನೆಕಾಲು ರೋಗ ಸೊಳ್ಳೆ ಕಚ್ಚುವುದರಿಂದ ಬರುತ್ತವೆ. ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವುದರಿಂದ ಮುಂದೆ ಆಗುವ ಅನಾಹುತಗಳನ್ನು ತಡೆಯಬಹುದು. ಸಾಮಾನ್ಯ ಜ್ವರಕ್ಕೂ ರಕ್ತ ಪರೀಕ್ಷೆ ಮಾಡಿಸಿ ತ್ವರಿತವಾಗಿ ಚಿಕಿತ್ಸೆ ಪಡೆಯಿರಿ. ರೋಗವನ್ನು ನಿಯಂತ್ರಿಸಲು ಸೊಳ್ಳೆ ಪರದೆ ಮತ್ತು ಸೊಳ್ಳೆ ನಿವಾರಕಗಳನ್ನು ಬಳಕೆಮಾಡಬೇಕು ಎಂದು ಸಲಹೆ ನೀಡಿದರು. ಈ ವರ್ಷದ ವಿಶ್ವ ಮಲೇರಿಯಾ ದಿನ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟ ತೀವ್ರಗೊಳಿಸೋಣ ಎಂಬ ಧ್ಯೇಯವಾಕ್ಯದ ಮೂಲಕ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನಾಲ್ಕು ಮಲೇರಿಯಾ ಪ್ರಕರಣ ಕಂಡು ಬಂದಿದ್ದು, ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ದುಡಿಯಲು ಹೋದ ಕಾರ್ಮಿಕರಲ್ಲಿ ರೋಗ ಕಂಡು ಬರುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಲೇರಿಯಾ ರೋಗದಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ ಎಂದು ಹೇಳಿದರು.ಶಾಖಾಘಾತಕ್ಕೆ ಮುಂಜಾಗ್ರತಾ ಕ್ರಮ: ಪ್ರಸಕ್ತ ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಶಾಖಾಘಾತ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ತೆಳುವಾದ ಹಾಗೂ ತಿಳಿಬಣ್ಣದ ಸಡಿಲವಾದ ಹತ್ತಿ ಬಟ್ಟೆ ಧರಿಸಬೇಕು. ಮಧ್ಯಾಹ್ನ ೧೨ರಿಂದ ಮಧ್ಯಾಹ್ನ ೩ ಗಂಟೆ ಸಮಯದಲ್ಲಿ ಹೊರಗೆ ಹೋಗಬಾರದು. ಮನೆಯಿಂದ ಹೊರಗೆ ಹೋಗುವಾಗ ಛತ್ರಿ, ಟೋಪಿ ಬಳಸಬೇಕು ಹಾಗೂ ನೀರಿನ ಬಾಟಲ್ ಜೊತೆಗೆ ತೆಗೆದುಕೊಂಡು ಹೋಗಬೇಕು. ತಂಪುಪಾನೀಯಗಳನ್ನು ಸೇವಿಸಬಾರದು, ಓಆರ್‌ಎಸ್‌, ಮಜ್ಜಿಗೆ, ಲಿಂಬು ಪಾನಕ ಸೇವಿಸಬೇಕು. ಬಾಯಾರಿಕೆ ಆಗಿರದಿದ್ದರೂ ಪದೇ ಪದೇ ನೀರು ಕುಡಿಯುವ ಮೂಲಕ ದೇಹವನ್ನು ನಿರ್ಜಲೀಕರಣ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಹವಾಮಾನ ವೈಪರಿತ್ಯದಿಂದ ಅತಿವೃಷ್ಟಿ, ಅನಾವೃಷ್ಟಿ, ಬರಗಾಲ ಉಂಟಾಗುತ್ತದೆ. ನೀರನ್ನು ಮಿತವಾಗಿ ಬಳಸಬೇಕು. ಪರಿಸರ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಮಾಡಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ವಿಷಯವನ್ನು ನಿಮ್ಮ ಮನೆಯವರಿಗೆ ಹಾಗೂ ನಿಮ್ಮ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ಕೀಟಶಾಸ್ತ್ರಜ್ಞ ಶ್ರೀಕಾಂತ ಪಾಟೀಲ ಮಲೇರಿಯಾ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಮಂಜುನಾಥ್ ವಡ್ಡರ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹವಾಮಾನ ವೈಪರೀತ್ಯ ಹಾಗೂ ಮಾನವ ಆರೋಗ್ಯ ಕುರಿತು ಸೂರ್ಯಾಘಾತ ನಿರ್ವಹಣೆ ಪ್ರಚಾರ ಸಾಮಗ್ರಿ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.ಹಾವೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಶಿಗ್ಗಾಂವಿ ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಚನ್ನಪ್ಪ ಲಮಾಣಿ, ಕುಮಾರಿ ಮಾಲಿನಿ ಮರಾಂಡೆ, ಎ.ಬಿ. ಪಾಟೀಲ, ಹಿರಿಯ ಆರೋಗ್ಯ ನಿರೀಕ್ಷಕರಾದ ಜಗದೀಶ, ಕಿರಿಯ ಆರೋಗ್ಯ ನಿರೀಕ್ಷಕರಾದ ಮಲ್ಲಿಕಾರ್ಜುನ ಸೇರಿದಂತೆ ಇತರರು ಉಪಸ್ಥಿತರಿದ್ದರು.