ಇಂಡಿಗನತ್ತ ಗ್ರಾಮದಲ್ಲಿ ಪೌಷ್ಠಿಕ ಆಹಾರ ವಿತರಣೆ

| Published : May 10 2024, 01:33 AM IST

ಸಾರಾಂಶ

ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಡಿಪಿಓ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪೌಷ್ಟಿಕ ಆಹಾರ ವಿತರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಡಿಪಿಓ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪೌಷ್ಟಿಕ ಆಹಾರ ವಿತರಣೆ ಮಾಡಿದರು.

ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ಪೊಲೀಸ್ ಠಾಣೆ ಸರಹದ್ದಿನ ಇಂಡಗನತ್ತ ಗ್ರಾಮದಲ್ಲಿ ಏ. 26ರಂದು ಚುನಾವಣೆ ಬಹಿಷ್ಕರಿಸಿದ್ದ ಗ್ರಾಮಸ್ಥರು ಮತದಾನ ವೇಳೆ ಮತಗಟ್ಟೆ ಹಾಗೂ ಈವಿಎಂ ಧ್ವಂಸ ಪ್ರಕರಣ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ 250 ರಿಂದ 300 ಜನರ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ 40ಕ್ಕು ಹೆಚ್ಚು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಗ್ರಾಮದಲ್ಲಿ ಭಯದ ವಾತಾವರಣದಿಂದ ಮನೆಗಳಿಗೆ ಬೀಗ ಜಡಿದು ತಮ್ಮ ಮಕ್ಕಳು ವಯೋವೃದ್ಧರು, ಗರ್ಭಿಣಿಯರು ಮತ್ತು ಬಾಣಂತಿಯರು ಗ್ರಾಮದಲ್ಲೇ ಬಿಟ್ಟು ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗಳು ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವ್ಯವಸ್ಥೆಗೆ ಮುಂದಾಗಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಹಾಗೂ ಎಡಿಸಿ ಗೀತಾ ಹುಡೇದ ತಾಲೂಕು ಮಟ್ಟದ ಅಧಿಕಾರಿಗಳಿಗೆ ಇಂಡಿಗನತ್ತ ಗ್ರಾಮದಲ್ಲಿ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ, ವರದಿ ನೀಡುವಂತೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಗುರುವಾರ ಸಿಡಿಪಿಓ ನಂಜಮಣಿ ಗ್ರಾಮ ಲೆಕ್ಕಿಗ ವಿನೋದ್ ಪಿಡಿಒ ಕಿರಣ್ ಕುಮಾರ್ ಶಿಕ್ಷಣ ಇಲಾಖೆಯ ಸಹಾಯಕ ಆಹಾರ ಅಧಿಕಾರಿ ದೇವರಾಜ್ ಗುರುವಾರ ಇಂಡಿಗನತ್ತ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿರುವ ಗರ್ಭಿಣಿಯರು ಮತ್ತು ಬಾಣಂತಿಯರು ವಯೋವೃದ್ಧರು ಮತ್ತು ಮಕ್ಕಳಿಗೆ ಹಾಲು ಪೌಷ್ಟಿಕ ಆಹಾರ ಕಡಲೆಕಾಯಿ ಚೆಕ್ಕೆ ವಿತರಣೆ ಮಾಡಿ ಗ್ರಾಮದಲ್ಲಿ ಸಮಸ್ಯೆಗಳಿದ್ದರೆ ಅಧಿಕಾರಿಗಳಿಗೆ ತಿಳಿಸುವ ಮೂಲಕ ಪರಿಹರಿಸಿಕೊಳ್ಳಿ ಎಂದು ಸಿಡಿಪಿಓ ನಂಜುಮಣಿ ಗ್ರಾಮಸ್ಥರಿಗೆ ತಿಳಿಸಿದರು.

ಶಾಲೆಯಲ್ಲಿ ಬಿಸಿ ಊಟ ಪ್ರಾರಂಭ

ಇಂಡಿಗನತ್ತ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಜೊತೆಗೆ ಅಲ್ಲಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ವಿಶೇಷವಾಗಿ ಡೀಸಿ ಆದೇಶದ ಮೇರೆಗೆ ಗ್ರಾಮದಲ್ಲಿ ಯಾರು ಸಹ ಹಸಿವಿನಿಂದ ಬಳಲಬಾರದು ಹೀಗಾಗಿ ಬಿಸಿ ಊಟಕ್ಕೆ ಬೇಕಾದ ಸಾಮಗ್ರಿಗಳನ್ನು ಪೂರೈಸಲು ಸಹ ಇದೆ ವೇಳೆಯಲ್ಲಿ ಶಿಕ್ಷಣ ಇಲಾಖೆಯ ಆಹಾರ ಅಧಿಕಾರಿ ತಿಳಿಸಿದರು.